ಸಭಾಪತಿ ವಿರುದ್ಧ ಬಿಜೆಪಿ ಅವಿಶ್ವಾಸ ನಿರ್ಣಯ ಮಂಡನೆ; ಬಿಬಿಎಂಪಿ: ಕೋರ್ಟ್ ಆದೇಶದ ಬಗ್ಗೆ ಚರ್ಚೆ -ಡಿಸಿಎಂ

ಬೆಂಗಳೂರು: ವಿಧಾನಪರಿಷತ್ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ನಗರದಲ್ಲಿ ಶುಕ್ರವಾರ ಡಿಸಿಎಂ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಮೇಲ್ಮನೆಯಲ್ಲಿ ನಮ್ಮ ಪಕ್ಷಕ್ಕೆ ಸಂಖ್ಯಾಬಲವಿದೆ. ಹೀಗಾಗಿ ಪರಿಷತ್ ಸಭಾಪತಿ ಸ್ಥಾನವೂ ಬಿಜೆಪಿಗೇ ಇರಬೇಕು ಎಂಬುದು ನಮ್ಮ ಪಕ್ಷದ ನಾಯಕರ ಆಪೇಕ್ಷೆಯಾಗಿದೆ. ಈ ಹಿನ್ನೆಲೆಯಲ್ಲಿ ಮುಂಬರುವ ಅಧಿವೇಶನದಲ್ಲಿ ಅವಿಶ್ವಾಸ ಗೊತ್ತುವಳಿ ಮಂಡಿಸಲು ನಿಶ್ಚಯಿಸಲಾಗಿದೆ ಎಂದರು.
ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಿ ಸಭಾಪತಿಯನ್ನು ಕೆಳಗಿಳಿಸಿದ ಮೇಲೆ ಮುಂದಿನ ಸಭಾಪತಿ ಯಾರಾಗಬೇಕು ಎಂದು ಪಕ್ಷದ ಮುಖಂಡರು ನಿರ್ಧಾರ ಮಾಡುತ್ತಾರೆ. ಜೆಡಿಎಸ್ ಜೊತೆ ಮಾತುಕತೆ ನಡೆಸಲಾಗುತ್ತಿದೆ ಎಂದರು.
ಫೆಬ್ರವರಿ ಹೊತ್ತಿಗೆ ಬಿಬಿಎಂಪಿ ಚುನಾವಣೆ ನಡೆಸಬೇಕು ಎಂದು ರಾಜ್ಯ ಹೈಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ಉಪ ಮುಖ್ಯಮಂತ್ರಿ ಹೇಳಿದರು.
ನ್ಯಾಯಾಲಯದ ಆದೇಶವನ್ನು ಸುಪ್ರೀಂ ಕೋರ್ಟ್‍ನಲ್ಲಿ ಪ್ರಶ್ನೆ ಮಾಡಬೇಕಾ? ಎಂಬುದರ ಬಗ್ಗೆ ಸಮಾಲೋಚನೆ ನಡೆಸಲಾಗುವುದು ಎಂದರು ಡಿಸಿಎಂ.
ಬಿಬಿಎಂಪಿಗೆ ಪ್ರತ್ಯೇಕ ಕಾಯ್ದ ಆಗಬೇಕು ಎನ್ನುವುದು ನಮ್ಮ ಬಯಕೆ. ಅದನ್ನು ನಮ್ಮ ಪ್ರಣಾಳಿಕೆಯಲ್ಲಿಯೇ ಹೇಳಿದ್ದೇವೆ. ಅದಕ್ಕಾಗಿ ನಾವು ಪ್ರತಿಪಕ್ಷದ ಜೊತೆ ಚರ್ಚಿಸುತ್ತೇವೆ. ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದವರು ತಿಳಿಸಿದರು.