ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ನಂತರ ಕರ್ನಾಟಕ ದೇಶದಲ್ಲೇ ನಂ.1 ರಾಜ್ಯವಾಗಲಿದೆ -ಡಿಸಿಎಂ

ಬೆಂಗಳೂರು: ಐಟಿ-ಬಿಟಿ, ತಂತ್ರಜ್ಞಾನ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕವು, ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾದ ನಂತರ ಕೆಲವೇ ವರ್ಷಗಳಲ್ಲಿ ಕೃಷಿ, ಕೈಗಾರಿಕೆ, ಸೇವೆ ಮತ್ತು ಆರೋಗ್ಯ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ನಂ.1 ರಾಜ್ಯವಾಗಿ ಹೊರಹೊಮ್ಮಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ನಗರದಲ್ಲಿ ಶನಿವಾರ ಸಿಎಂಆರ್ ವಿಶ್ವವಿದ್ಯಾಲಯದ ಘಟಿಕೋತ್ಸವವದಲ್ಲಿ ವರ್ಚುಯಲ್ ವೇದಿಕೆ ಮೂಲಕ ಮುಖ್ಯ ಭಾಷಣ ಮಾಡಿದ ಡಿಸಿಎಂ ಅವರು, ಅತ್ಯಂತ ದೂರದೃಷ್ಟಿಯಿಂದ ರೂಪಿಸಲ್ಪಟ್ಟಿರುವ ಶಿಕ್ಷಣ ನೀತಿಯು ಭಾರತಕ್ಕೆ ಹೊಸ ದಿಕ್ಕು ತೋರಲಿದೆ. ಮುಖ್ಯವಾಗಿ ಕರ್ನಾಟಕಕ್ಕೆ ಅತಿಹೆಚ್ಚು ಲಾಭ ತಂದುಕೊಡಲಿದೆ. ನೀತಿಯ ಕರಡು ಸಮಿತಿಯಲ್ಲಿ ಕನ್ನಡಿಗರೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು ಎಂದರು.
ಸದ್ಯಕ್ಕೆ ಕರ್ನಾಟಕವು ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ತಂತ್ರಜ್ಞಾನ, ಎಲೆಕ್ಟ್ರಾನಿಕ್ಸ್, ಸಂಶೋಧನೆ ಸೇರಿದಂತೆ ಇನ್ನೂ ಹಲವಾರು ಕ್ಷೇತ್ರಗಳಲ್ಲಿ ದೇಶದಲ್ಲಿಯೇ ಅತ್ಯುತ್ತಮ ಸಾಧನೆ ಮಾಡಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾದ ನಂತರ ಸಾಂಪ್ರದಾಯಿಕ ಹಾಗೂ ಅಕಾಡೆಮಿಕ್ ಆಧಾರಿತ ಶಿಕ್ಷಣದ ಸ್ವರೂಪವು ಆಮೂಲಾಗ್ರವಾಗಿ ಬದಲಾಗಲಿದೆ. ಆ ಮೂಲಕ ಮುಂದಿನ ದಿನಗಳಲ್ಲಿ ಕೈಗಾರಿಕೆ, ಕೃಷಿ, ತೋಟಗಾರಿಕೆ, ನೀರಾವರಿ, ಆರೋಗ್ಯ ಸೇವೆ, ಸಾರಿಗೆ ಸೇರಿದಂತೆ ಬಹುತೇಕ ಎಲ್ಲ ಕ್ಷೇತ್ರಗಳಲ್ಲೂ ಕರ್ನಾಟಕ ಅಚ್ಚರಿಯ ರೀತಿಯಲ್ಲಿ ಅಭಿವೃದ್ಧಿ ಹೊಂದಲಿದೆ ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.
ಸಮಾಜದ ಎಲ್ಲ ಹಂತಗಳಿಗೂ ಶಿಕ್ಷಣವನ್ನು ಪರಿಣಾಮಕಾರಿಯಾಗಿ ಕೊಂಡೊಯ್ದರೆ ಎಲ್ಲ ಕ್ಷೇತ್ರಗಳಲ್ಲೂ ಗುರುತರ ಬದಲಾವಣೆ ಕಂಡು ಬರುತ್ತದೆ ಎಂದು ಡಿಸಿಎಂ ಹೇಳಿದರು.
ಘಟಿಕೋತ್ಸವದಲ್ಲಿ ನ್ಯಾಯಮೂರ್ತಿ ಅಬ್ದುಲ್ ನಜೀರ್, ಸಿಎಂಆರ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಗೂ ರಾಜ್ಯಸಭೆ ಸದಸ್ಯ ಕೆ.ಸಿ.ರಾಮಮೂರ್ತಿ, ಸಿಎಂಆರ್ ವಿವಿಯ ಕುಲಪತಿ ಡಾ.ಸಬಿತಾ ರಾಮಮೂರ್ತಿ ಮುಂತಾದವರು ಪಾಲ್ಗೊಂಡಿದ್ದರು.