ಮೈಸೂರು: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿಕೆ ಉದ್ಧಟತನದ ಪ್ರದರ್ಶನ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮರಾಠಿ ಭಾಷೆ ಮತ್ತು ಸಂಸ್ಕೃತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತನಾಡಿರುವುದು ಅವರ ಉದ್ಧಟತನದ ಪ್ರದರ್ಶನವಾಗಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಅವರ ಹೇಳಿಕೆಯು ಭಾರತೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವಾಗಿದೆ. ಮಹಾಜನ್ ವರದಿಯೇ ಅಂತಿಮ ಎಂಬುದು ಎಲ್ಲರೂ ಬಲ್ಲ ಸತ್ಯ. ಪ್ರಾದೇಶಿಕತೆ ಪ್ರದರ್ಶನ ಮತ್ತು ಭಾಷಾಂಧತೆಯ ಮಾತುಗಳು ದೇಶದ ಏಕತೆಗೆ ಮಾರಕವಾಗಿವೆ. ಇದನ್ನು ನಾನು ಖಂಡಿಸುತ್ತೇನೆ ಎಂದಿದ್ದಾರೆ ಬಿಎಸ್ ವೈ.
ಕರ್ನಾಟಕದಲ್ಲಿ ಮರಾಠಿಗರು ಕನ್ನಡಿಗರೊಂದಿಗೆ ಬೆರೆತಿದ್ದಾರೆ. ಅದೇ ರೀತಿ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿರುವ ಕನ್ನಡಿಗರು ಮರಾಠಿಗರೊಂದಿಗೆ ಬೆರೆತಿದ್ದಾರೆ. ಈ ಸೌಹಾರ್ದಯುತ ವಾತಾವರಣವನ್ನು ಕೆಡಿಸುವ ಪ್ರಯತ್ನ ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಂದ ಆಗುತ್ತಿರುವುದು ನೋವಿನ ಸಂಗತಿ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.
ಒಬ್ಬ ಭಾರತೀಯನಾಗಿ ಉದ್ಧವ್ ಠಾಕ್ರೆ ಅವರು ಒಕ್ಕೂಟ ತತ್ವವನ್ನು ಗೌರವಿಸುವ ಬದ್ಧತೆಯನ್ನು ತೋರಲಿ ಎಂದು ಸಿಎಂ ಬಿಎಸ್ ವೈ ಸಲಹೆ ನೀಡಿದ್ದಾರೆ.

