ಕೊರೊನಾ ಸಂದರ್ಭದಲ್ಲಿ ಕರ್ನಾಟಕ ಸರ್ಕಾರ ಉತ್ತಮವಾಗಿ ಕಾರ್ಯ ನಿರ್ವಹಿಸಿದೆ -ರಾಜ್ಯಪಾಲ ವಜುಭಾಯಿ ವಾಲಾ

ಬೆಂಗಳೂರು: ಕೊರೊನಾ ಸಂದರ್ಭದಲ್ಲಿ ಕರ್ನಾಟಕ ಸರ್ಕಾರ ಉತ್ತಮವಾಗಿ ಕಾರ್ಯ ನಿರ್ವಹಿಸಿದೆ ಎಂದು ರಾಜ್ಯಪಾಲ ವಜುಭಾಯಿ ವಾಲಾ ಮೆಚ್ಚುಗೆ ವ್ಯಕ್ತಪಡಿಸಿದರು.
ರಾಜ್ಯ ವಿಧಾನ ಮಂಡಲ ಅಧಿವೇಶನ ಗುರುವಾರದಿಂದ ಆರಂಭವಾಗಿದ್ದು ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಮಾತನಾಡಿದರು.
ಕೊರೊನಾ ವಿರುದ್ಧ ರಾಜ್ಯದ ಜನತೆ ಸಹ ಹೋರಾಡಿದ್ದಾರೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ಕರ್ನಾಟಕ ಸರ್ಕಾರ ಯಶಸ್ವಿಯಾಗಿದೆ ಎಂದು ರಾಜ್ಯಪಾಲರು ತಿಳಿಸಿದರು.
1.26 ಲಕ್ಷ ಜನರಿಗೆ ಕೊರೊನಾ ಸಂದರ್ಭದಲ್ಲಿ ಉಚಿತ ಚಿಕಿತ್ಸೆ ನೀಡಲಾಗಿದೆ. 325 ಕೋಟಿ ವೆಚ್ಚದಲ್ಲಿ 4 ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಲಾಗುತ್ತಿದೆ. ಆತ್ಮನಿರ್ಭರ ಭಾರತ ನಿರ್ಮಾಣಕ್ಕೆ ಕರ್ನಾಟಕ ಸಾಕಷ್ಟು ಕೊಡುಗೆ ನೀಡಿದೆ ಎಂದರು. ವಿವಿಧ ಜಿಲ್ಲೆಗಳಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಕಾರ್ಯ ನಡೆಯುತ್ತಿದೆ. ಬಡವರಿಗೆ ಸೂರು ಕಲ್ಪಿಸುವ ಕಾರ್ಯ ನಡೆಯುತ್ತಿದೆ ಎಂದು ರಾಜ್ಯಪಾಲರು ತಮ್ಮ ಭಾಷಣದಲ್ಲಿ ಹೇಳಿದರು.
ವೈದ್ಯಕೀಯ ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯ ಮುಂದಿದ್ದು, ರಾಜ್ಯದ ಆಸ್ಪತ್ರೆಗಳು ಸಾಕಷ್ಟು ಅಭಿವೃದ್ದಿಯಾಗಿವೆ. ರಾಜ್ಯದಲ್ಲಿ ಉದ್ಯೋಗ ಸೃಷ್ಠಿ ಪ್ರಮಾಣ ಹೆಚ್ಚಾಗಿದೆ ಎಂದು ರಾಜ್ಯಪಾಲರು ತಿಳಿಸಿದರು.
ರಾಜ್ಯ ಸರ್ಕಾರ ರೈತರ ಕಲ್ಯಾಣಕ್ಕೆ ಸಾಕಷ್ಟು ಕ್ರಮಗಳನ್ನ ಕೈಗೊಂಡಿದೆ. ಈ ನಡುವೆ ರಾಜ್ಯದಲ್ಲಿ ಫಸಲಿನ ಪ್ರಮಾಣ ಹೆಚ್ಚಾಗಿದೆ. ಈ ಮೂಲಕ ಕೃಷಿ ಕ್ಷೇತ್ರದಲ್ಲಿ ಕರ್ನಾಟಕ ಸಾಕಷ್ಟು ಅಭಿವೃದ್ಧಿಯಾಗಿದೆ ಎಂದು ರಾಜ್ಯಪಾಲ ವಾಲಾ ಹೇಳಿದರು.