ಸರ್ಕಾರಕ್ಕೆ ತಗಲಿರುವ ಭ್ರಷ್ಟಾಚಾರದ ವೈರಸ್ ಗೆ ಎಲ್ಲಿಂದ ಲಸಿಕೆ ತರುವುದು -ಸಿದ್ದರಾಮಯ್ಯ

ಬೆಂಗಳೂರು: ನಿಮ್ಮ ಸರ್ಕಾರಕ್ಕೆ ತಗಲಿರುವ ಭ್ರಷ್ಟಾಚಾರದ ವೈರಸ್ ಗೆ ಎಲ್ಲಿಂದ ಲಸಿಕೆ ತರುವುದು? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯನವರು, ಕೊರೊನಾ ನಿಯಂತ್ರಣದ ಹೆಸರಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ನಮ್ಮ ಆರೋಪಕ್ಕೆ ಸಾಕ್ಷಿ ಹೇಳುವಂತಿದೆ ಮತ್ತೆ ಅವತರಿಸಿ ಕೇಕೆ ಹಾಕುತ್ತಿರುವ ಕೊರೊನಾ ವೈರಸ್ ಎಂದು ಟ್ವೀಟ್ ಮಾಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ, ನಿಯಂತ್ರಣಕ್ಕೆ ಸರ್ಕಾರ ಖರ್ಚು ಮಾಡಿದ್ದರೆ ಮತ್ತೆ ಯಾಕೆ ಕೊರೊನಾ ಸೋಂಕು ಉಲ್ಬಣಗೊಳ್ಳುತ್ತಿದೆ? ಎಂದು ಪ್ರಶ್ನಿಸಿದ್ದಾರೆ.
ಕೊರೊನಾ ನಿರ್ವಹಣೆಗಾಗಿ 5,372 ಕೋಟಿ ರೂ. ಖರ್ಚು ಮಾಡಲಾಗಿದೆ ಎಂದು ಬಜೆಟ್ ನಲ್ಲಿ ಹೇಳಿರುವ ಬಿಎಸ್‍ವೈ ಅವರು ಮಾಡಿರುವ ಖರ್ಚಿನ ವಿವರ ತಿಳಿಸಿಲ್ಲ. ಈಗಲಾದರೂ ಆ ಹಣ ಯಾವ ಉದ್ದೇಶಗಳಿಗೆ ಖರ್ಚು ಮಾಡಿದ್ದೀರಿ ಎಂಬ ಲೆಕ್ಕದ ವಿವರವನ್ನು ಜನರ ಮುಂದಿಡಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಕೊರೊನಾ ಮೊದಲ ಅಲೆಯ ನಿಯಂತ್ರಣದಲ್ಲಿನ ಲೋಪ-ದೋಷವನ್ನು ಎರಡನೇ ಅಲೆಯಲ್ಲಿಯಾದರೂ ತಿದ್ದಿಕೊಂಡು, ಕೊರೊನಾವನ್ನು ಭ್ರಷ್ಟಾಚಾರಕ್ಕೆ ದುರ್ಬಳಕೆ ಮಾಡಿಕೊಳ್ಳದೆ ಕೆಲಸ ಮಾಡಿ ಜನರನ್ನು ಉಳಿಸಿ ಎಂದು ಸಿದ್ದರಾಮಯ್ಯನವರು ಟ್ವೀಟ್ ಮಾಡಿದ್ದಾರೆ.