18 ವರ್ಷ ಮೇಲ್ಪಟ್ಟವರೆಲ್ಲರಿಗೂ ಕೋವಿಡ್ ಲಸಿಕೆಗೆ ಐಎಂಎ ಮನವಿ

ನವದೆಹಲಿ: ಕೊರೊನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರು ಕೋವಿಡ್ ಲಸಿಕೆ ಪಡೆದುಕೊಳ್ಳಲು ಅನುಮತಿ ನೀಡಬೇಕೆಂದು ಭಾರತೀಯ ವೈದ್ಯಕೀಯ ಸಂಸ್ಥೆ (ಐಎಂಎ ) ಪ್ರಧಾನಿ ನರೇಂದ್ರಮೋದಿ ಅವರಿಗೆ ಮನವಿ ಮಾಡಿದೆ.
ಈ ಕುರಿತು ಐಎಂಎ ರಾಷ್ಟ್ರೀಯ ಅಧ್ಯಕ್ಷ ಡಾ.ಜೆ.ಎ.ಜೈಲಾಲ್ ಅವರು ಪ್ರಧಾನಿಗಳಿಗೆ ಪತ್ರ ಬರೆದಿದ್ದಾರೆ.
ಪ್ರಸ್ತುತ 45 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ಹಾಕಿಸಿಕೊಳ್ಳಲು ಅವಕಾಶ ನೀಡಲಾಗಿದೆ. 2ನೇ ಹಂತದ ಸೋಂಕು ವ್ಯಾಪಕಗೊಳ್ಳುತ್ತಿರುವುದರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಹಾಕಿಸಿಕೊಳ್ಳಲು ಅವಕಾಶ ನೀಡಬೇಕು ಎಂದು ಅವರು ಪತ್ರದಲ್ಲಿ ಪ್ರಧಾನ ಮಂತ್ರಿ ಅವರಲ್ಲಿ ಮನವಿ ಮಾಡಿದ್ದಾರೆ.
ಯಾವುದೇ ಸಾರ್ವಜನಿಕ ಸ್ಥಳಕ್ಕೆ ಪ್ರವೇಶ ಪಡೆಯಬೇಕಾದರೆ ಕೋವಿಡ್ ಲಸಿಕೆ ಪಡೆದ ಪ್ರಮಾಣ ಪತ್ರವನ್ನು ಹಾಜರುಗೊಳಿಸುವುದನ್ನು ಕಡ್ಡಾಯಗೊಳಿಸಿ. ಸೋಂಕಿನ ನಿಯಂತ್ರಣಕ್ಕಾಗಿ ನಿಯಮಿತವಾದ ಲಾಕ್ ಡೌನ್ ಜಾರಿಗೊಳಿಸುವುದು ತುರ್ತು ಅಗತ್ಯವಿದೆ. ಅತ್ಯಾವಶ್ಯಕವಲ್ಲದ ಸಿನಿಮಾ, ಸಾಂಸ್ಕøತಿಕ, ಧಾರ್ಮಿಕ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಲಾಕ್ ಡೌನ್ ನಿಯಮಾವಳಿ ಜಾರಿಗೊಳಿಸಬೇಕೆಂದು ಐಎಂಎ ಮನವಿ ಮಾಡಿದೆ.
ಪ್ರಸ್ತುತ 7.4 ಲಕ್ಷ ಸಕ್ರಿಯ ಪ್ರಕರಣಗಳಿವೆ. 2ನೇ ಹಂತದ ಕೊರೊನಾ ವೇಗವಾಗಿ ಹರಡುತ್ತಿದೆ. ವೈರಸ್ ನಿಯಂತ್ರಣಕ್ಕೆ ಅಗತ್ಯವಾದ ಮಾರ್ಗಸೂಚಿ ಪಾಲಿಸದಿರುವುದು, ಮಾಸ್ಕ್ ಧರಿಸದಿರುವುದು ಸೋಂಕು ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಐಎಂಎ ಆತಂಕ ವ್ಯಕ್ತಪಡಿಸಿದೆ.