ಲಸಿಕೆಗೆ ಹೆಚ್ಚು ಹಣ ಕೇಳುವ ಆಸ್ಪತ್ರೆಗಳ ವಿರುದ್ಧ ಕ್ರಮ -ಸಿಎಂ ಬಿಎಸ್ ವೈ

ಬೆಂಗಳೂರು: ಲಸಿಕೆಗೆ ಹೆಚ್ಚು ಹಣ ಕೇಳುವ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದೆಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎಚ್ಚರಿಸಿದರು.
18 ವರ್ಷ ಮೇಲ್ಪಟ್ಟ ವಯಸ್ಕರಿಗೆ ಕೋವಿಡ್ ಸೋಂಕಿನಿಂದ ರಕ್ಷಿಸಿಕೊಳ್ಳಲು ಲಸಿಕೆ ಹಾಕಿಸಿಕೊಳ್ಳುವ 4ನೇ ಹಂತದ ಲಸಿಕಾ ಕಾರ್ಯಕ್ರಮಕ್ಕೆ ಸಿಎಂ ಯಡಿಯೂರಪ್ಪ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಶನಿವಾರ ಸಾಂಕೇತಿಕವಾಗಿ ಚಾಲನೆ ನೀಡಿ, ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಲಸಿಕೆಗೆ ದರ ನಿಗದಿ ಮಾಡಲಾಗಿದೆ ಎಂದು ತಿಳಿಸಿದ ಸಿಎಂ ಲಸಿಕೆಗೆ ಸೇವಾ ಶುಲ್ಕ 100 ರೂಪಾಯಿ ನಿಗದಿ ಮಾಡಲಾಗಿದ್ದು 100 ರೂಪಾಯಿಗಿಂತ ಹೆಚ್ಚು ಹಣ ಪಡೆದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಕೇಂದ್ರ ಸರ್ಕಾರದಿಂದ 3 ಲಕ್ಷ ಲಸಿಕೆ ಲಭ್ಯವಾಗಿದ್ದು ನಮ್ಮ ಬಳಿ ಒಂದು ಲಕ್ಷ ಲಭ್ಯವಿದೆ. ಎರಡು ದೇಶೀಯ ಲಸಿಕೆ ಲಭ್ಯವಿದೆ. ಈ ತಿಂಗಳಲ್ಲಿ ಇನ್ನೊಂದು ಲಸಿಕೆ ಬರಲಿದೆ. ಶೀಘ್ರವೇ ಎಲ್ಲವೂ ಸರಿಹೋಗಿ ಎಲ್ಲರಿಗೂ ಲಸಿಕೆ ಲಭ್ಯವಾಗುತ್ತದೆ ಎಂದು ಭರವಸೆ ನೀಡಿದರು.
ಕೋವಿಡ್ ರೋಗಿಗಳಿಗೆ ನೀಡುವ ರೆಮೆಡಿಸಿವಿರ್ ಹಾಗೂ ಬೇರೆ ಔಷಧಿಗಳನ್ನು ಕಾಳಸಂತೆಯಲ್ಲಿ ದುಪ್ಪಟ್ಟು ಬೆಲೆಗೆ ಮಾರಾಟ ಮಾಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕೋವಿಡ್-19 ನ ಎರಡನೇ ಅಲೆ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹೆಚ್ಚಾಗಿದೆ. ಈ ಆರೋಗ್ಯ ತುರ್ತು ಪರಿಸ್ಥಿತಿಯಲ್ಲಿ ಜನರಿಂದ ಖಾಸಗಿ ಆಸ್ಪತ್ರೆಗಳು ಮನಸೋ ಇಚ್ಛೆ ಹಣ ವಸೂಲಿ ಮಾಡಿದರೆ, ಸರಿಯಾದ ಚಿಕಿತ್ಸೆ ನೀಡಲು ನಿರಾಕರಿಸಿದರೆ ಅಂತಹ ಆಸ್ಪತ್ರೆಗಳ ವಿರುದ್ಧ ಕೂಡ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದರು.