ಬೆಂಗಳೂರು : ಕರ್ನಾಟಕದಲ್ಲಿ ಉತ್ಪಾದನೆ ಆಗುವ ಆಕ್ಸಿಜನ್ ಅನ್ನು ರಾಜ್ಯದ ಬಳಕೆಗೇ ಮೀಸಲಿಡಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.
ಕೊರೊನಾ ಸೋಂಕು ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಉಂಟಾಗಿರುವ ಪರಿಸ್ಥಿತಿ, ಸರ್ಕಾರ ಕೈಗೊಂಡಿರುವ ಕ್ರಮಗಳು ಹಾಗೂ ಸೋಂಕಿತರ ಪ್ರಾಣ ರಕ್ಷಣೆಗೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಹಾಗೂ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರೊಂದಿಗೆ ಬುಧವಾರ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿ, ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ಈಗ ರಾಜ್ಯಕ್ಕೆ ನಿಗದಿ ಮಾಡಿರುವ ಆಕ್ಸಿಜನ್ ಪ್ರಮಾಣ ಬೇಡಿಕೆಯ ಶೇ. 50ರಷ್ಟು ಸಹ ಇಲ್ಲ. ಬೇಡಿಕೆಗೆ ಅನುಗುಣವಾಗಿ ರಾಜ್ಯಕ್ಕೆ ಆಕ್ಸಿಜನ್ ಪೂರೈಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಅವರು ಒತ್ತಾಯಿಸಿದರು.
ನಿನ್ನೆ ನಾನು ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಚಾಮರಾಜನಗರ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಚರ್ಚೆ ನಡೆಸಿದಾಗ ಆಕ್ಸಿಜನ್ ಕೊರತೆಯಿಂದ ಮೃತರಾಗಿರುವುದು 28 ಮಂದಿ ಎಂದು ಜಿಲ್ಲಾಧಿಕಾರಿ, ಜಿಲ್ಲಾ ವೈದ್ಯಾಧಿಕಾರಿ, ಆಸ್ಪತ್ರೆಯ ಡೀನ್ ಅವರೇ ಒಪ್ಪಿಕೊಂಡಿದ್ದಾರೆಂದರು.
ಚಾಮರಾಜನಗರ ದುರಂತದ ಬಗ್ಗೆ ನ್ಯಾಯಾಂಗ ತನಿಖೆ ಆಗಬೇಕು ಎಂದು ಹೇಳಿದ್ದೆ. ಇದೀಗ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಸತ್ಯ ಹೊರಬಂದ ಬಳಿಕ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ಸಿದ್ದರಾಮಯ್ಯ ಹೇಳಿದರು.
ಆಕ್ಸಿಜನ್ ಪೂರೈಕೆ ವಿಚಾರದಲ್ಲಿ ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾಧಿಕಾರಿಗಳ ಹೇಳಿಕೆಗಳು ವಿಭಿನ್ನವಾಗಿದೆ. ಆ ಕುರಿತಾಗಿಯೂ ತನಿಖೆ ನಡೆಯಬೇಕು ಎಂದರು.
ವಿಧಾನಸಭೆಯ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಸಂಸದ ನಾಸೀರ್ ಹುಸೇನ್, ಎಐಸಿಸಿ ವಕ್ತಾರ ಬ್ರಿಜೇಶ್ ಕಾಳಪ್ಪ ಸುದ್ದಿಗೋಷ್ಠಿಯಲ್ಲಿದ್ದರು.
ರಾಜ್ಯದಲ್ಲಿ ಉತ್ಪಾದನೆಯಾಗುವ ಆಕ್ಸಿಜನ್ ರಾಜ್ಯದ ಬಳಕೆಗೇ ಇರಲಿ -ಸಿದ್ದರಾಮಯ್ಯ

