ರಾಜ್ಯದಲ್ಲಿ ಈವರೆಗೆ 1,784 ಕಪ್ಪು ಶಿಲೀಂಧ್ರ ಪ್ರಕರಣ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಈವರೆಗೆ 1,784 ಕಪ್ಪು ಶಿಲೀಂಧ್ರ ಪ್ರಕರಣ ಕಂಡುಬಂದಿದ್ದು, 62 ಮಂದಿ ಗುಣಮುಖರಾಗಿದ್ದಾರೆ. ಇದಕ್ಕೆ ಬೇಕಾದ ಔಷಧಿಯನ್ನೂ ಪಡೆಯಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಸಚಿವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಶನಿವಾರ ಮಾತನಾಡಿದರು.
ಕಪ್ಪು ಶಿಲೀಂಧ್ರ ಸೋಂಕಿನ ಎಲ್ಲಾ ಜಿಲ್ಲಾವಾರು ಮಾಹಿತಿ ತರಿಸಿಕೊಳ್ಳಲಾಗಿದೆ. ರಾಜ್ಯಾದ್ಯಂತ ಈವರೆಗೆ 1,784 ಪ್ರಕರಣ ಕಂಡುಬಂದಿದೆ. ಇದರಲ್ಲಿ 1,564 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಒಬ್ಬ ಸೋಂಕಿತನಿಗೆ ಕನಿಷ್ಠ 2-3 ವಾರ ಚಿಕಿತ್ಸೆ ಬೇಕಾಗುತ್ತದೆ. ಸಂಪೂರ್ಣ ಗುಣಮುಖರಾಗಲು 5-6 ವಾರಗಳ ಕಾಲ ಚಿಕಿತ್ಸೆ ನೀಡಬೇಕಾಗುತ್ತದೆ. ಈಗಾಗಲೇ 62 ಮಂದಿ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಆದರೆ ದುರದೃಷ್ಟ 111 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿಸಿದರು.
ಕಪ್ಪು ಶಿಲೀಂಧ್ರ ಸೋಂಕಿಗೆ ಅಂಪೆÇಟೆರಿಸಿನ್ ಬಿ ಔಷಧಿ ವೈಲ್ ಬೇಕಾಗುತ್ತದೆ. ಕೇಂದ್ರ ಸರ್ಕಾರವು 9,750 ವೈಲ್ ಗಳನ್ನು ರಾಜ್ಯಕ್ಕೆ ಹಂಚಿಕೆ ಮಾಡಿದೆ ಎಂದು ಮಾಹಿತಿ ನೀಡಿದರು.
ಕೋವಿಡ್ ಲಸಿಕೆಯ 58 ಲಕ್ಷ ಡೋಸ್ ಗಳನ್ನು ನೀಡಲಾಗುವುದು. 70-75 ಲಕ್ಷ ಜನರಿಗೆ ಇದೇ ತಿಂಗಳಲ್ಲಿ ಲಸಿಕೆ ಹಾಕಲಾಗುವುದು. ರಾಜ್ಯದಲ್ಲಿ ಈವರೆಗೆ ಒಂದೂವರೆ ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ. ಜೂನ್ ಅಂತ್ಯಕ್ಕೆ ರಾಜ್ಯದ 2.25 ಕೋಟಿ ಜನರಿಗೆ ಲಸಿಕೆ ನೀಡಲಾಗುವುದು. ಆದಷ್ಟು ಶೀಘ್ರದಲ್ಲೇ ಎಲ್ಲರಿಗೂ ಲಸಿಕೆ ದೊರೆಯಲಿದೆ ಎಂದರು.
ಮಧ್ಯಮ ವರ್ಗದವರು, ಬಡವರ್ಗದವರು ಸರ್ಕಾರಿ ಆಸ್ಪತ್ರೆಗೆ ಬರುತ್ತಿದ್ದು, ಎಲ್ಲರಿಗೂ ಕಪ್ಪು ಶಿಲೀಂಧ್ರಕ್ಕೆ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಮುಖ್ಯಮಂತ್ರಿಗಳು ಹಿಂದೆಯೇ ಸಂಪೂರ್ಣ ಉಚಿತ ಚಿಕಿತ್ಸೆ ನೀಡುತ್ತೇವೆ ಎಂದು ಘೋಷಿಸಿದ್ದಾರೆ. ಒಬ್ಬರಿಗೆ 2-3 ಲಕ್ಷ ರೂ. ಖರ್ಚಾಗಲಿದ್ದು, ಸರ್ಕಾರವೇ ಭರಿಸುತ್ತಿದೆ ಎಂದು ತಿಳಿಸಿದರು.
ಖಾಸಗಿ ಆಸ್ಪತ್ರೆಗಳಲ್ಲಿ ಬ್ಲ್ಯಾಕ್ ಫಂಗಸ್ ಚಿಕಿತ್ಸೆ ಉಚಿತವಾಗಿ ನೀಡಲು ಆಯುμÁ್ಮನ್ ಭಾರತ್-ಆರೋಗ್ಯ ಕರ್ನಾಟಕದಡಿ ಚಿಕಿತ್ಸೆ ನೀಡಬೇಕೆಂದು ಸಲಹೆ ಬಂದಿದೆ. ಈ ಕುರಿತು ಮಾತುಕತೆ ನಡೆಸಲಾಗುವುದು ಎಂದರು.
ಒಂದೂವರೆ ಕೋಟಿ ಕೋವಿಡ್ ಲಸಿಕೆ ಉಚಿತವಾಗಿಯೇ ನೀಡಿದ್ದೇವೆ. ಹೆಪಟೈಟಿಸ್ ಬಿ ಲಸಿಕೆ 1982 ರಲ್ಲಿ ಪರಿಚಯವಾದರೂ, ಭಾರತಕ್ಕೆ 2002ರಲ್ಲಿ ಬಂತು. ಒಂದು ಲಸಿಕೆ ಬರಲು 20 ವರ್ಷ ಬೇಕಾಯಿತು. ಕೊರೊನಾ ಲಸಿಕೆ ದೇಶೀಯವಾಗಿಯೇ ತಯಾರಾಗಿದೆ. ಇದರಲ್ಲೂ ರಾಜಕಾರಣ ಮಾಡಿದರೆ ಜನರೇ ಛೀಮಾರಿ ಹಾಕುತ್ತಾರೆ ಎಂದರು.