ವಿದ್ಯುತ್ ದರ ಏರಿಕೆ ವಿರೋಧಿಸಿ ಕರ್ನಾಟಕ ಸೇನಾ ಪಡೆಯಿಂದ ಪ್ರತಿಭಟನೆ

ಮೈಸೂರು: ಪೆಟ್ರೋಲ್, ಡೀಸೆಲ್, ಎಲ್ಪಿಜಿ, ಆಹಾರ ಧಾನ್ಯ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ, ರಾಜ್ಯ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿರುವುದನ್ನು ಖಂಡಿಸಿ ನಗರದಲ್ಲಿ ಕಪ್ಪು ಪಟ್ಟಿ ಧರಿಸಿ ಕರ್ನಾಟಕ ಸೇನಾ ಪಡೆಯಿಂದ ಪ್ರತಿಭಟಿಸಲಾಯಿತು.
ಪೆಟ್ರೋಲ್ ದರ ಶತಕ ಬಾರಿಸಿ, ಡೀಸೆಲ್, ಎಲ್ಪಿಜಿ, ಅಡುಗೆ ಎಣ್ಣೆ, ಆಹಾರ ಧಾನ್ಯಗಳು ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದೆ ಎಂದು ಪ್ರತಿಭಟನಾ ನೇತೃತ್ವ ವಹಿಸಿದ್ದ ಕರ್ನಾಟಕ ಸೇನಾ ಪಡೆಯ ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ ಟೀಕಿಸಿದರು.
ಜನತೆ ಕಳೆದ ಒಂದು ವರ್ಷದಿಂದ ಕೊರನಾ ಮತ್ತು ಲಾಕ್ಡೌನ್ ನಿಂದಾಗಿ ಆರ್ಥಿಕವಾಗಿ ಬಹಳ ಹಿಂದುಳಿದಿದ್ದಾರೆ. 60ರಷ್ಟು ಜನರು ಕೆಲಸ ಕಳೆದುಕೊಂಡು ಒಂದು ಹೊತ್ತು ಊಟಕ್ಕೂ ಪರದಾಡುತ್ತಿದ್ದಾರೆ. ಪರಿಸ್ಥಿತಿ ಹೀಗಿರುವಾಗ ರಾಜ್ಯಸರ್ಕಾರ ವಿದ್ಯುತ್ ದರ ಏರಿಕೆ ಮಾಡುತ್ತಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಸರ್ಕಾರ ಕೂಡಲೇ ವಿದ್ಯುತ್ ದರ ಏರಿಕೆಯನ್ನು ಹಿಂಪಡೆಯಬೇಕು ಅವರು ಆಗ್ರಹಿಸಿದರು.
ಕರ್ನಾಟಕ ಸೇನಾ ಪಡೆಯ ಡಾ. ಮೊಗಣ್ಣಾಚಾರ್, ಕೃಷ್ಣಪ್ಪ, ಗಣೇಶ ಪ್ರಸಾದ್, ಮಂಜುನಾಥ್, ಚಂದ್ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.