ಬೆಂಗಳೂರು: ಶಾಲಾರಂಭದ ಕುರಿತು ಈಗಾಗಲೇ ಮಾರ್ಗದರ್ಶಿ ಸೂತ್ರಗಳನ್ನು ಹೊರಡಿಸಲಾಗಿದೆಯಾದರೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಲಾಕ್ ಡೌನ್ ಜಾರಿಯಲ್ಲಿದ್ದು, ಶಿಕ್ಷಕರ ಚಲನವಲನಕ್ಕೆ ತೊಂದರೆಯಾಗಿರುವುದರಿಂದ ಶಿಕ್ಷಕರು ಲಾಕ್ ಡೌನ್ ತೆರವಾದ ದಿನದಿಂದಲೇ ಶಾಲೆಗಳಿಗೆ ಭೌತಿಕವಾಗಿ ಹಾಜರಾಗಲು ಅವಕಾಶ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಸೋಮವಾರ ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಂಗಳವಾರದಿಂದ ಶಾಲೆಗಳಿಗೆ ಶಿಕ್ಷಕರು ಹಾಜರಾಗಿ ಮಕ್ಕಳ ನೋಂದಣಿ ಪ್ರಾರಂಭಿಸಬೇಕಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಶಿಕ್ಷಕರ ಚಲನವಲನಕ್ಕೆ ತೊಂದರೆಯಾಗಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಪೂರ್ಣಗೊಂಡ ನಂತರ ಶಿಕ್ಷಕರು ಶಾಲೆಗಳಿಗೆ ಹಾಜರಾಗುವಂತೆ ಸುತ್ತೋಲೆ ಹೊರಡಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಕೆಲ ಉಪನ್ಯಾಸಕ ಸಂಘಟನೆಗಳ ಕೋರಿಕೆಯ ಮೇರೆಗೆ ಮೊದಲ ಪಿ.ಯು.ಸಿ. ಮೌಲ್ಯಾಂಕನ ಪ್ರಕ್ರಿಯೆಯನ್ನು ಎಲ್ಲ ಜಿಲ್ಲೆಗಳ ಲಾಕ್-ಡೌನ್ ಅವಧಿ ಪೂರ್ಣಗೊಳ್ಳುವವರೆಗೆ ಸಮಯ ವಿಸ್ತರಿಸಿ ಆದೇಶವನ್ನು ಹೊರಡಿಸಲಾಗುತ್ತದೆ ಎಂದು ಸಹ ಸಚಿವರು ಹೇಳಿದ್ದಾರೆ.
ಈ ಬಾರಿ ನಿಗದಿತ ಅವಧಿಯ ಮೌಲ್ಯಮಾಪನ ಪ್ರಕ್ರಿಯೆಯನ್ನು ಹೆಚ್ಚು ಸಮರ್ಥವಾಗಿ ಜಾರಿಯಲ್ಲಿಡುವ ಅವಶ್ಯಕತೆ ಇದೆ. ಪ್ರತಿ ಸೂಚಿತ ಅವಧಿಗೆ ವಿದ್ಯಾರ್ಥಿಗಳ ಚೈಲ್ಡ್ ಪೆÇ್ರಫೈಲ್ ಗಳನ್ನು ನಿಯಮಿತವಾಗಿ ದಾಖಲಿಸುವ, ಕಲಿಕಾ ಸಾಮಥ್ರ್ಯಗಳನ್ನು ಅಳೆಯುವ ಮಾನದಂಡಗಳಾಗಿ ರೂಪಿಸುವ ಸದೃಢ ವ್ಯವಸ್ಥೆಯನ್ನು ಜಾರಿಯಲ್ಲಿಡುವ ವ್ಯವಸ್ಥೆ ರೂಪಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ಅತ್ಯವಶ್ಯಕವಾಗಿದ್ದು, ಇಂಥಹ ಸಂದರ್ಭದಲ್ಲಿ ಇದನ್ನು ಪರಿಣಾಮಕಾರಿಯಾಗಿ ಅನುμÁ್ಠನಗೊಳಿಸಲು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿ ಮಂಡಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಕೊಠಡಿ ಮೇಲ್ವಿಚಾರಕರುಗಳಿಗೆ ಕೋವಿಡ್-19ರ ಲಸಿಕೆಯನ್ನು ನೀಡುವ ಪ್ರಕ್ರಿಯೆಯನ್ನು ಪರೀಕ್ಷೆಗೆ ಮುನ್ನ ಪೂರ್ಣಗೊಳಿಸುವಲ್ಲಿ ಜಿಲ್ಲಾಡಳಿತದೊಂದಿಗೆ ಸಮನ್ವಯತೆ ಸಾಧಿಸಿ ಕ್ರಮ ವಹಿಸಬೇಕೆಂದೂ ಸೂಚಿಸಲಾಗಿದೆ ಎಂದೂ ಸಚಿವರು ಹೇಳಿದರು.
ಶಿಕ್ಷಕರ ವರ್ಗಾವಣಾ ಪ್ರಕ್ರಿಯೆಯ ಕುರಿತಂತೆ ನಿಯಮಗಳ ಆಕ್ಷೇಪಣಾ ಸಲ್ಲಿಕೆ ಅವಧಿ ಪೂರ್ಣಗೊಳ್ಳುತಿರುವ ಹಿನ್ನೆಲೆಯಲ್ಲಿ ಕೂಡಲೇ ಸರ್ಕಾರದ ಅಧಿಸೂಚನೆಯನ್ನು ಹೊರಡಿಸಿ ಸಾಧ್ಯವಾದಷ್ಟು ಶೀಘ್ರವೇ ವರ್ಗಾವಣಾ ಪ್ರಕ್ರಿಯೆ ಕೈಗೊಳ್ಳಬೇಕೆಂದು ಸೂಚನೆ ನೀಡಲಾಗಿದೆ ಎಂದು ಸಚಿವರು ಹೇಳಿದರು. ಯಾವುದೇ ಅಡೆತಡೆಗಳು ಬಾರದ ರೀತಿಯಲ್ಲಿ ತಂತ್ರಜ್ಞಾನಾಧಾರಿತ ವರ್ಗಾವಣಾ ಪ್ರಕ್ರಿಯೆ ನಡೆಸಬೇಕೆಂದು ಸೂಚಿಸಲಾಗಿದೆಯೆಂದರು.
ಖಾಸಗಿ ಶಾಲಾ ಶಿಕ್ಷಕರಿಗೆ ಮುಖ್ಯಮಂತ್ರಿಗಳು ಘೋಷಿಸಿರುವ ಪ್ಯಾಕೇಜ್ ಪರಿಹಾರವನ್ನು ಫಲಾನುಭವಿಗಳಿಗೆ ನೇರವಾಗಿ ವಿತರಿಸುವ ಪ್ರಕ್ರಿಯೆಯನ್ನು ಕ್ಷಿಪ್ರಗೊಳಿಸಬೇಕೆಂದೂ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶಿಕ್ಷಕರ, ಶಿಕ್ಷಕೇತರರ ಹಾಗೂ ಅತಿಥಿ ಶಿಕ್ಷಕರ ಬ್ಯಾಂಕ್‍ಖಾತೆಗಳ ವಿವರಗಳನ್ನು ಶೀಘ್ರ ಸಂಗ್ರಹಿಸಿ ಅನುದಾನವನ್ನು ನೇರ ಶಿಕ್ಷಕರ ಖಾತೆಗಳಿಗೆ ವರ್ಗಾಯಿಸಬೇಕು. ಅತ್ಯಂತ ಸಮರ್ಪಕವಾಗಿ ಈ ಪ್ರಕ್ರಿಯೆ ನಿರ್ವಹಣೆಯಾಗಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಪ್ರಥಮ ಪಿಯುಸಿ ಮೌಲ್ಯಾಂಕನ ಅವಧಿ ವಿಸ್ತರಣೆ; ಶಿಕ್ಷಕರ ವರ್ಗಾವಣಾ ವೇಳಾಪಟ್ಟಿ ಶೀಘ್ರದಲ್ಲೇ ಪ್ರಕಟ -ಸಚಿವ ಎಸ್. ಸುರೇಶ್ ಕುಮಾರ್

