ಕಲಬುರಗಿ: ಕಲಬುರಗಿ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳು ಸೇರಿದಂತೆ ಕಲ್ಯಾಣ ಕರ್ನಾಟಕದ ವಿಷಯಗಳ ಕುರಿತು ಚರ್ಚಿಸಲು ಜುಲೈ ಕೊನೆವಾರ ಅಥವಾ ಆಗಸ್ಟ್ ತಿಂಗಳಲ್ಲಿ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಉದ್ದೇಶಿಸಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ಆರ್ .ನಿರಾಣಿ ಅವರು ತಿಳಿಸಿದರು.
ಬುಧವಾರ ಗುಲ್ಬರ್ಗಾ ವಿಶ್ವವಿದ್ಯಾಲದ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಂಪುಟ ಸಭೆ ನಡೆಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಕೋರಲಾಗುವುದು ಎಂದು ಅವರು ತಿಳಿಸಿದರು.
ಜಿಲ್ಲೆಯ ಕುಡಿಯುವ ನೀರಿನ ವಿವಿಧ ಹಂತದ ಯೋಜನೆಗಳು, ನೀರಾವರಿ ಯೋಜನೆಗಳು, ರಸ್ತೆಗಳು ಮುಂತಾದ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು. ಇಂತಹ ಅಭಿವೃದ್ಧಿ ಯೋಜನೆಗಳಿಗೆ ಶೇಕಡ 100ರಷ್ಟು ಸಂಪುಟ ಸಭೆಯಲ್ಲೇ ಪರಿಹಾರ ನೀಡಲು ಪ್ರಯತ್ನಿಸಲಾಗುವುದು ಎಂದು ಅವರು ಹೇಳಿದರು.

