ಬೆಂಗಳೂರು: ಪದವಿ ಮತ್ತು ಡಿಪ್ಲೊಮೊ ಸೆಮಿಸ್ಟರ್‌ಗಳ ಬಾಕಿ ಉಳಿದಿರುವ ಪರೀಕ್ಷೆಗಳನ್ನು ಬೇಗ ಮುಗಿಸಬೇಕು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಎಲ್ಲ ವಿಶ್ವವಿದ್ಯಾಲಯ ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆಗೆ ಸೂಚನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ ಪರೀಕ್ಷೆಗಳನ್ನು ನಡೆಸುವ ಹಾಗೂ ಕಾಲೇಜುಗಳನ್ನು ತೆರೆಯುವ ಬಗ್ಗೆ ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೂಂದಿಗೆ ಅವರು ಮಾತನಾಡಿದರು.
ಡಿಪ್ಲೊಮೊ ತರಗತಿಗಳ 1, 3 & 5ನೇ ಸೆಮಿಸ್ಟರ್‌ಗಳ ಪ್ರಾಯೋಗಿಕ ಪರೀಕ್ಷೆಗಳು ಹಾಗೂ ಬಾಕಿ ಉಳಿದಿರುವ ಥಿಯರಿ ಪರೀಕ್ಷೆಗಳನ್ನು ಅಗಸ್ಟ್ ಒಳಗೆ ಮುಗಿಸಬೇಕು ಹಾಗೂ ಪದವಿ ಪರೀಕ್ಷೆಗಳನ್ನು ಅಕ್ಟೋಬರ್ ತಿಂಗಳ ಒಳಗಾಗಿ ಮುಗಿಸಬೇಕು ಎಂದು ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.
ಎಲ್ಲ ಪರೀಕ್ಷೆಗಳಲ್ಲೂ ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯ. ದೈಹಿಕ ಅಂತರ, ಮಾಸ್ಕ್ ಧರಿಸುವುದನ್ನು ತಪ್ಪಿಸುವಂತಿಲ್ಲ. ಒಂದು ವೇಳೆ ಯಾವುದೇ ವಿದ್ಯಾರ್ಥಿಗೆ ಪಾಸಿಟೀವ್ ಬಂದಿದ್ದರೆ ಅಂಥರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಬೇಕು ಎಂದು ಆದೇಶಿಸಲಾಗಿದೆ ಎಂದು ಡಿಸಿಎಂ ಮಾಹಿತಿ ನೀಡಿದರು.
ಬಹುತೇಕ ಎಲ್ಲ ವಿವಿಗಳು ಪರೀಕ್ಷೆಗಳನ್ನು ಮುಗಿಸಿದ್ದು, ಕೋವಿಡ್ ಲಾಕ್‌ಡೌನ್ ಕಾರಣಕ್ಕೆ ಕರ್ನಾಟಕ ವಿವಿ, ಕಲಬುರಗಿ ವಿವಿ, ಬೆಂಗಳೂರು ವಿವಿ ಪರೀಕ್ಷೆ ನಡೆಸಲು ಸಾಧ್ಯವಾಗಿಲ್ಲ. ಬಾಕಿ ಇರುವ ಬೆಸ ಸೆಮಿಸ್ಟರ್‌ಗಳ ಪರೀಕ್ಷೆಯನ್ನು ಅಗಸ್ಟ್ ೧೫ರೊಳಗೆ ಮುಗಿಸಬೇಕು ಹಾಗೂ ಸಮ ಸೆಮಿಸ್ಟರ್‌ಗಳನ್ನು ಅಕ್ಟೋಬರ್‌ನೊಳಗೆ ಮುಗಿಸಬೇಕು ಎಂದರು.
ಕಾಲೇಜು ಆರಂಭ; ಇನ್ನೆರಡು ದಿನದಲ್ಲಿ ನಿರ್ಧಾರ
ಉನ್ನತ ಶಿಕ್ಷಣ ವಿಭಾಗದ ಕಾಲೇಜುಗಳನ್ನು ಆರಂಭಿಸುವ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಇನ್ನೆರಡು ದಿನಗಳಲ್ಲಿ ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿಗಳು ತಿಳಿಸಿದರು.ಈಗಾಗಲೇ ಶೇ.75ರಷ್ಟು ಪದವಿ ವಿದ್ಯಾರ್ಥಿಗಳಿಗೆ ಲಸಿಕೆ ಕೊಡಲಾಗಿದೆ.

