ಗಡಿ ಜಿಲ್ಲೆಗಳಲ್ಲಿ ಕೋವಿಡ್ ನಿಯಂತ್ರಣ ಬಂದ ಕೂಡಲೇ ಹಂತ ಹಂತವಾಗಿ ಶಾಲೆ ಆರಂಭ -ಸಿಎಂ ಬೊಮ್ಮಾಯಿ

ಬೆಂಗಳೂರು: ಗಡಿ ಜಿಲ್ಲೆಗಳಲ್ಲಿ ಕೋವಿಡ್ ನಿಯಂತ್ರಣ ಬಂದ ಕೂಡಲೇ ಹಂತ ಹಂತವಾಗಿ ಶಾಲೆ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ಬೆಂಗಳೂರಿನ ಮಲ್ಲೇಶ್ವರದ ನಿರ್ಮಲಾರಾಣಿ ಪ್ರೌಢ ಶಾಲೆಗೆ ಸಿಎಂ ಸೋಮವಾರ ಭೇಟಿ ನೀಡಿ, ಭೌತಿಕ ತರಗತಿಗಳ ಪ್ರಾರಂಭಕ್ಕೆ ಕೈಗೊಂಡಿರುವ ವ್ಯವಸ್ಥೆಗಳ ಕುರಿತು ಪರಿಶೀಲಿಸಿ, ನಂತರ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ತರಗತಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಜತೆ ಮಾತನಾಡಿದ ಮುಖ್ಯಮಂತ್ರಿಗಳು, ಮಕ್ಕಳಿಗೆ ಕೋವಿಡ್ ನಿಂದ ಸ್ವತಂತ್ರ ಸಿಕ್ಕಿದೆ. ಸರಕಾರ ಈ ಬಗ್ಗೆ ನಿಗಾ ವಹಿಸಲಿದೆ ಎಂದರು.

ಚೆನ್ನಾಗಿ ವ್ಯಾಸಂಗ ಮಾಡುವಂತೆ ಹುರಿದುಂಬಿಸಿದರು. ವಿವಿಧ ವಿಷಯಗಳ ಬಗ್ಗೆ ಮಕ್ಕಳ ಜತೆ ಸಂವಾದ ನಡೆಸಿದರಲ್ಲದೆ ತರಗತಿಗಳಲ್ಲಿ ಸ್ವಚ್ಛತೆ, ಕೋವಿಡ್ ನಿಯಮಗಳ ಪಾಲನೆಯನ್ನು ಪರಿಶೀಲಿಸಿದರು.

ರಾಜ್ಯಾದ್ಯಂತ ಇಂದಿನಿಂದ 9ರಿಂದ 12ನೇ ತರಗತಿಗಳು ಆರಂಭವಾಗಿವೆ. ವಿದ್ಯಾರ್ಥಿಗಳು ಸಂತೋಷದಿಂದ ಶಾಲೆಗೆ ಹಾಜರಾಗಿದ್ದಾರೆ. ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ತರಗತಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಹಲವಾರು ವಿದ್ಯಾರ್ಥಿಗಳು ಮುಕ್ತ ಸಂವಾದ ನಡೆಸಿ ಶಾಲೆಗೆ ಬಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹಾಗೂ ಇಲಾಖೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.