ನಟ ಪುನೀತ್ ನಿಧನಕ್ಕೆ ಸಚಿವರ ತೀವ್ರ ಸಂತಾಪ

ಬೆಂಗಳೂರು: ಜನಪ್ರಿಯ ನಟ ಪುನೀತ್ ರಾಜಕುಮಾರ್ ಅವರ ಹಠಾತ್ ನಿಧನಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

`ಪುನೀತ್ ಅವರು ಚಿಕ್ಕ ವಯಸ್ಸಿನಲ್ಲೇ ಅಪಾರ ಸಾಧನೆ ಮಾಡಿದ್ದರು. ನಾಡು-ನುಡಿ ಮತ್ತು ಸಮಾಜದ ಬಗ್ಗೆ ಅಪಾರ ಕಳಕಳಿ ಹೊಂದಿದ್ದ ಅವರನ್ನು ಕಳೆದುಕೊಂಡಿರುವುದರಿಂದ ಕನ್ನಡ ನಾಡು ಅಕ್ಷರಶಃ ಬಡವಾಗಿದೆ’ ಎಂದು ಅವರು ತಮ್ಮ ಶೋಕಸಂದೇಶದಲ್ಲಿ ದುಃಖಿಸಿದ್ದಾರೆ.

ರಚನಾತ್ಮಕ ಕಾರ್ಯಕ್ರಮಗಳಿಗೆ ಸದಾ ಬೆನ್ನೆಲುಬಾಗಿ ನಿಂತುಕೊಳ್ಳುತ್ತಿದ್ದ ಪುನೀತ್ ಅವರು ಇನ್ನಿಲ್ಲವೆಂದರೆ ನಂಬುವುದು ಕಷ್ಟವಾಗುತ್ತದೆ. ಅವರ ಸ್ಥಾನವನ್ನು ಬೇರೆ ಯಾರಿಂದಲೂ ತುಂಬುವುದು ಸಾಧ್ಯವಿಲ್ಲ ಎಂದು ಸಚಿವರು ಕಂಬನಿ ಮಿಡಿದಿದ್ದಾರೆ.

ಪುನೀತ್ ಅವರ ನಿಧನದ ನೋವನ್ನು ತಡೆದುಕೊಳ್ಳುವಂತಹ ಶಕ್ತಿಯನ್ನು ಭಗವಂತನು ಅವರ ಕುಟುಂಬದ ಸದಸ್ಯರಿಗೆ, ಬಂಧುಬಾಂಧವರಿಗೆ ಮತ್ತು ಅಭಿಮಾನಿ ಬಳಗಕ್ಕೆ ನೀಡಲಿ; ಪರಮಾತ್ಮನು ಅವರ ಆತ್ಮಕ್ಕೆ ಶಾಂತಿಯನ್ನು ಕೊಡಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

ಹೆಚ್.ಡಿ. ದೇವೇಗೌಡ, ಮಾಜಿ ಪ್ರಧಾನ ಮಂತ್ರಿ

ಕನ್ನಡ ಚಿತ್ರ ರಂಗದ ಖ್ಯಾತ ಚಿತ್ರನಟ ಯುವರತ್ನ ಪುನೀತ್ ರಾಜ್ ಕುಮಾರ್ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ಆಘಾತ ವಾಗಿದೆ

ಅವರ ನಟಿಸ್ಸಿದ್ದ ಪೃತ್ವಿ ಮತ್ತು ರಾಜಕುಮಾರ ಚಿತ್ರವನ್ನು ಅಪ್ಪು ಅವರ ಜೊತೆಯಲ್ಲೇ ನೋಡಿದ್ದೇ ಈ ದಿನ ಅವರಿಲ್ಲ ಎಂದರೆ ನಂಬಲಸಾಧ್ಯ ವಾಗಿದೆ

ಈ ದಿನ ಯುವರತ್ನನನ್ನು ಕಳೆದುಕೊಂಡು ನಮ್ಮ ಕರುನಾಡು ಬರಿದಾಗಿದೆ

ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ

ದೇವರು ಅವರ ಕುಟುಂಬ ವರ್ಗಕ್ಕೆ ಹಾಗೂ ಅವರ ಅಭಿಮಾನಿಗಳಿಗೆ ದುಃಖ ಬರಿಸುವ ಶಕ್ತಿ ತುಂಬಲಿ

ನಟ ಪುನೀತ್ ರಾಜ್ ಕುಮಾರ್ ನಿಧನಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ಸಂತಾಪ

ಈ ನಾಡು ಕಂಡ ಅಪ್ರತಿಮ‌ ನಟ, ಕನ್ನಡಿಗರ ಕಣ್ಮಣಿ, ಕನ್ನಡ ಚಿತ್ರರಂಗದ ಯುವರತ್ನ ಪುನೀತ್ ರಾಜ್ ಕುಮಾರ್ ಅವರ ನಿಧನ ಬರಸಿಡಿಲು ಬಡಿದಂತಾಗಿದೆ.

ಪುನೀತ್ ಅವರ ನಿಧನದ ಈ ದಿನ ಕೇವಲ ಚಿತ್ರರಂಗದ ಪಾಲಿಗೆ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗ ಮತ್ತು ಕರ್ನಾಟಕದ ಪಾಲಿಗೆ ಕರಾಳ ದಿನ. ಕನ್ನಡ ಭಾಷೆ, ನೆಲ, ಜಲದ ವಿಚಾರ ಬಂದಾಗ ಮುಂಚೂಣಿಯಲ್ಲಿ ನಿಲ್ಲುತ್ತಿದ್ದರು. ಎಲ್ಲರ ಮನಗಳಲ್ಲಿ ನೆಲೆಸಿರುವ ಅಪ್ಪು ಅವರ ನಿಧನದ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗ, ಅಭಿಮಾನಿಗಳಿಗೆ ಆ ದೇವರು ಕರುಣಿಸಲಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ.

ನಟನಾಗಿ ಮಾತ್ರವಲ್ಲದೆ ಸಮಾಜಮುಖಿ ಕಾರ್ಯಗಳನ್ನು ಮಾಡುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದರು. ಅವರ ಸೇವೆ, ತ್ಯಾಗ ಎಂದಿಗೂ ಮರೆಯಲು ಸಾಧ್ಯವಿಲ್ಲ. ಕನ್ನಡ ಚಿತ್ರರಂಗದಲ್ಲಿ ಪುನೀತ್ ಹೆಸರು ಅಜರಾಮರವಾಗಿ ಉಳಿಯಲಿದೆ.

ಬಾಲ ನಟನಾಗಿಯೇ ಎಲ್ಲರ ಮನ ಗೆದ್ದಿದ್ದ ಪುನೀತ್ ರಾಜ್ ಕುಮಾರ್ ಅವರ ನಿಧನದಿಂದ ಅಭಿಮಾನಿಗಳು ತಾಳ್ಮೆ ಕಳೆದುಕೊಳ್ಳಬಾರದು. ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡಬಾರದು. ಶಾಂತಿ ಕಾಪಾಡಿ, ಪುನೀತ್ ಅವರ ಆತ್ಮಕ್ಕೆ ಶಾಂತಿ ಕೋರಬೇಕು.

-ಎಸ್.ಟಿ.ಸೋಮಶೇಖರ್
ಸಹಕಾರ ಸಚಿವರು
ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರು

ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ, ಅವಧೂತ ದತ್ತಪೀಠ, ಮೈಸೂರು

ಕನ್ನಡ ಚಿತ್ರರಂಗದ ಖ್ಯಾತ ನಟರಾಗಿದ್ದ ದಿವಂಗತ ಡಾ.ರಾಜಕುಮಾರ್ ಅವರ ಕಿರಿಯ ಪುತ್ರ ಪುನೀತ್ ರಾಜಕುಮಾರ್ ಅವರ ಅಕಾಲಿಕ ನಿಧನ ತೀವ್ರ ನೋವನ್ನುಂಟುಮಾಡಿದೆ.

ಅವರ ಕುಟುಂಬದವರು ನಮ್ಮ ಆಶ್ರಮದ ಭಕ್ತರಾಗಿದ್ದರು.
ಅವರ ಅಗಲಿಕೆ ಇಡೀ ಕರ್ನಾಟಕಕ್ಕೆ ದೊಡ್ಡ ಆಘಾತವನ್ನುಂಟು ಮಾಡಿದ್ದು, ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನುಂಟುಮಾಡಿದೆ.
ದತ್ತಸ್ವಾಮಿಯು ಅವರ ಕುಟುಂಬ ವರ್ಗದವರಿಗೂ, ಚಿತ್ರರಂಗದವರಿಗೂ, ಅಪಾರ ಅಭಿಮಾನಿಗಳಿಗೂ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇವೆ.