ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಸ್ಮರಣಾರ್ಥ ಹೊಸ ಕಲಾವಿದರ ತರಬೇತಿ ಸಂಸ್ಥೆ ಆರಂಭಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಒತ್ತಾಯಿಸಿದ್ದಾರೆ.
ಬೆಂಗಳೂರು ಅರಮನೆ ಮೈದಾನದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಆಯೋಜಿಸಿದ್ದ ಪುನೀತ ನಮನ ಕಾರ್ಯಕ್ರಮದಲ್ಲಿ ಮಂಗಳವಾರ ಮಾತನಾಡಿದ ಅವರು, ಸರಕಾರ ಇದಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುನೀತ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿರುವುದು ಸ್ವಾಗತಾರ್ಹ. ಅದೇ ರೀತಿ ಅವರು ಹೊಸ ಕಲಾವಿದರಿಗಾಗಿ ತರಬೇತಿ ಸಂಸ್ಥೆ ಆರಂಭಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಹೇಳಿದರು.
ಹಿಂದೆ ಬಂಗಾರಪ್ಪನವರ ಸರಕಾರವಿದ್ದಾಗ ಕರ್ನಾಟಕದಲ್ಲಿ ಮೊದಲ ಬಾರಿ ಡಾ. ರಾಜಕುಮಾರ್ ಅವರಿಗೆ ಕರ್ನಾಟಕ ಪ್ರಶಸ್ತಿ ಘೋಷಣೆ ಮಾಡಲಾಗಿತ್ತು. ನಾನು ಆಗ ಬಂಗಾರಪ್ಪನವರ ಸಂಪುಟದಲ್ಲಿ ಮಂತ್ರಿಯಾಗಿದ್ದೆ ಎಂದರು.
ರಾಜಕುಮಾರ್ ಅವರ ಕುಟುಂಬ ಸಾಮಾಜಿಕ ಬದ್ಧತೆಗೆ ಹೆಸರುವಾಸಿ. ರಾಜಕುಮಾರ್ ಅವರು ಹಾಕಿಕೊಟ್ಟ ದಾರಿಯಲ್ಲೇ ಪುನೀತ್ ಅವರು ನಡೆದರು. ಅವರು ಕೈಗೊಂಡಿರುವ ಸಾಮಾಜಿಕ ಸೇವಾ ಕಾರ್ಯಗಳು ಎಲ್ಲರಿಗೂ ಮಾದರಿ ಎಂದು ಡಿಕೆಶಿ ತಿಳಿಸಿದರು.

