ಸಂಗೀತ ನಿರ್ದೇಶಕ ಹಂಸಲೇಖ ವಿರುದ್ಧ ದೂರು

ಬೆಂಗಳೂರು: ಉಡುಪಿ ಶ್ರೀಕೃಷ್ಣ ಮಠದ ಪೇಜಾವರ ಶ್ರೀವಿಶ್ವೇಶ ತೀರ್ಥರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಸಂಗೀತ ನಿರ್ದೇಶಕ ಹಂಸಲೇಖ ವಿರುದ್ಧ ಬೆಂಗಳೂರಿನ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮೈಸೂರಿನಲ್ಲಿ ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ಸಂಗೀತ ನಿರ್ದೇಶಕ ಹಂಸಲೇಖ ಅವರು ಪೇಜಾವರ ಶ್ರೀಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ವಿಡಿಯೋ ಒಂದು ವೈರಲ್ ಆಗಿತ್ತು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಮತ್ತು ವಿರೋಧ ವ್ಯಕ್ತವಾಗಿತ್ತು. ಇದರ ಬೆನ್ನಲೇ ಹಂಸಲೇಖ ಕ್ಷಮೆಯನ್ನು ಸಹ ಕೋರಿದ್ದರು. ಹಂಸಲೇಖ ಹೇಳಿಕೆಗೆ ಈಗಿನ ಪೇಜಾವರ ಶ್ರೀಗಳು ಸಹ ಬೇಸರ ವ್ಯಕ್ತಪಡಿಸಿದ್ದರು.

ಹಂಸಲೇಖ ಅವರು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಸಾಮಾಜಿಕ ಸಾಮರಸ್ಯಕ್ಕಾಗಿ ಪೇಜಾವರ ಶ್ರೀಗಳು ಕೈಗೊಂಡ ಕಾರ್ಯಕ್ರಮಗಳ ಬಗ್ಗೆ ಲೇವಡಿ ಮಾಡಿದ್ದಾರೆ. ಅಲ್ಲದೆ ನನ್ನ ಆರಾಧ್ಯ ದೈವ ಬಿಳಿಗಿರಿರಂಗನಾಥನ ಬಗ್ಗೆ ತುಚ್ಛವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಶ್ರೀಗಳ ಶಿಷ್ಯವೃಂದ ಕೃಷ್ಣರಾಜ ಎಂಬವರು ಹಂಸಲೇಖರ ವಿರುದ್ಧ ಬೆಂಗಳೂರಿನ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.