ಕೊರೊನಾ ನಿಯಂತ್ರಣಕ್ಕೆ ಕಠಿಣ ನಿಯಮ -ಬೊಮ್ಮಾಯಿ

ಹುಬ್ಬಳ್ಳಿ :ಕೊರೊನಾ ಸೋಂಕು ನಿಯಂತ್ರಿಸಲು ಕಠಿಣ ನಿಯಮಗಳನ್ನು ಜಾರಿಗೆ ತರುವ ಅನಿವಾರ್ಯತೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,

ರಾಜಧಾನಿ ಬೆಂಗಳೂರು ಸೇರಿದಂತೆ ಉಳಿದ ಜಿಲ್ಲಾಗಳಲ್ಲಿ ಬಿಗಿ ಕ್ರಮಗಳನ್ನು ಜಾರಿಗೆ ತರುವ ಅಗತ್ಯವಿದೆ ಎಂದು ಹೇಳಿದರು.

ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯವಾಗಿದೆ. ಈ ಬಗ್ಗೆ ಆರೋಗ್ಯ ಸಚಿವರಿಗೆ ಸೂಚನೆ ನೀಡಿದ್ದೇನೆ. ಆದರೆ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಲಾಕ್‍ಡೌನ್ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿವೆ. ವಿದೇಶಿ ಪ್ರಯಾಣಿಕರನ್ನು ವಿಮಾನ ನಿಲ್ದಾಣಗಳಲ್ಲಿಯೇ ಸಂಪೂರ್ಣವಾಗಿ ಟೆಸ್ಟ್ ಮಾಡಬೇಕೆಂದು ನಿರ್ಧಾರ ಮಾಡಿದ್ದೇವೆ ಎಂದರು.

ಕಳೆದ ಬಾರಿ ವಿದೇಶಿ ಪ್ರವಾಸಿಗರಿಂದ ಸೋಂಕು ಹರಡಿತ್ತು. ಈ ಹಿನ್ನೆಲೆಯಲ್ಲಿ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದೇವೆ. ಲಾಕ್‍ಡೌನ್ ಪ್ರಸ್ತಾಪ ಇಲ್ಲ ಎಂದು ಪುನರುಚ್ಚರಿಸಿದರು.

ಗುರುವಾರ ದೆಹಲಿಗೆ ಹೋಗುತ್ತಿದ್ದು, ಅಲ್ಲಿ ಆರೋಗ್ಯ ಸಚಿವರ ಜತೆ ಮಾತುಕತೆ ನಡೆಸಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ರಾಜ್ಯದಲ್ಲಿ ನಿಯಮ ಜಾರಿಗೆ ತರಲಾಗುವುದು ಎಂದು ಸಿಎಂ ತಿಳಿಸಿದರು.

ಆರೋಗ್ಯ ಇಲಾಖೆ ಮತ್ತು ಕೋವಿಡ್ ಫ್ರಂಟ್ ಲೈನ್ ವರ್ಕರ್ಸ್‍ಗೆ ಬೂಸ್ಟರ್ ಡೋಸ್ ನೀಡುವ ಬಗ್ಗೆ ವೈಜ್ಞಾನಿಕ ಪ್ರಗತಿ ಮತ್ತು ಕೇಂದ್ರ ಸರ್ಕಾರದ ಅನಿಸಿಕೆ, ಶಿಫಾರಸು ಏನಿದೆ ಎಂದು ಚರ್ಚೆ ಮಾಡುತ್ತೇನೆ ಎಂದು ಹೇಳಿದರು.

ವಿದೇಶದಿಂದ ಬಂದವರನ್ನು ಒಂದು ವಾರ ಗಮನಿಸುತ್ತೇವೆ. ವಿದೇಶ ಹಾಗೂ ಕೇರಳದಿಂದ ಬಂದವರಿಗೆ ನಿಗಾ ವಹಿಸಲು ಜಿಲ್ಲಾಕಾರಿಗಳಿಗೆ ಸೂಚನೆ ನೀಡಲಾಗಿದೆ, ಕೇರಳ ಗಡಿಗಳಲ್ಲಿ ಹೆಚ್ಚಿನ ತಪಾಸಣೆ ಮಾಡುತ್ತಿದ್ದೇವೆ. ಕೋವಿಡ್ ನಿಯಂತ್ರಿಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳುತ್ತೇವೆ, ಲಸಿಕಾಕರಣ ತೀವ್ರಗೊಳಿಸಿದ್ದೇವೆ ಎಂದು ಬೊಮ್ಮಾಯಿ ಹೇಳಿದರು.

ಧಾರವಾಡದಲ್ಲಿ 306 ಜನರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಸುಮಾರು 7 ಸಾವಿರ ಜನರ ತಪಾಸಣೆ ಮಾಡಲಾಗಿದೆ. ಏಳು ದಿನಗಳ ನಂತರ ಇಬ್ಬರಿಗೆ ಮಾತ್ರ ಪಾಸಿಟಿವ್ ಬಂದಿದೆ. ಕ್ರಮೇಣ ಇಳಿಕೆ ಆಗುತ್ತಿದೆ. ಆದರೂ ತೀವ್ರ ನಿಗಾ ವಹಿಸಲಾಗಿದೆ  ಎಂದು ಹೇಳಿದರು.