ಪ್ರಜ್ವಲ್ ರೇವಣ್ಣಗೆ ಲುಕೌಟ್ ನೋಟಿಸ್

ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಸಂಸದ ಪ್ರಜ್ವಲ್ ರೇವಣ್ಣಗೆ ಲುಕೌಟ್ ನೋಟಿಸ್ ಜಾರಿ ಮಾಡಲಾಗಿದೆ.

ಎಲ್ಲಾ ವಿಮಾನ ನಿಲ್ದಾಣದ ಇಮಿಗ್ರೇಷನ್‍ ವಿಭಾಗಕ್ಕೆ ಎಸ್‍ಐಟಿ ಅಧಿಕಾರಿಗಳು ಲುಕೌಟ್ ನೋಟಿಸ್ ತಲುಪಿಸಿದ್ದಾರೆ.

ವಿಚಾರಣೆಗೆ ಹಾಜರಾಗಲು 7 ದಿನ ಅವಕಾಶ ನೀಡುವಂತೆ ಕೋರಿ ಪ್ರಜ್ವಲ್ ರೇವಣ್ಣ ವಿಶೇಷ ತನಿಖಾ ತಂಡಕ್ಕೆ ಮನವಿ ಮಾಡಿದ್ದಾರೆ.

ಪ್ರಜ್ವಲ್ ರೇವಣ್ಣ ಪರ ವಕೀಲ ಅರುಣ್ ಜಿ ಅವರು ಎಸ್‍ಐಟಿ ಮುಖ್ಯಸ್ಥರಿಗೆ ಪತ್ರ ಬರೆದು ಮನವಿ ಸಲ್ಲಿಸಿದ್ದರು.

ಏಪ್ರಿಲ್ 21ರಂದು ಹೊರಬಿದ್ದ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ವೀಡಿಯೋಗಳಲ್ಲಿ ಹಲವಾರು ಮಹಿಳೆಯರ ಅಶ್ಲೀಲ ವೀಡಿಯೋ ಎಲ್ಲೆಡೆ ಹರಿದಾಡುತ್ತಿವೆ.

ಇದುವರೆಗೂ ಓರ್ವ ಸಂತ್ರಸ್ತೆ ಮಾತ್ರ ದೂರು ನೀಡಿದ್ದು, ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಅವರ ಹೇಳಿಕೆಯನ್ನು ಪಡೆದುಕೊಳ್ಳಲಾಗಿದೆ.

ಅವರ ಹೇಳಿಕೆ ವೀಡಿಯೋ ರೆಕಾರ್ಡ್ ಮಾಡಿಕೊಂಡಿರುವ ಎಸ್‍ಐಟಿ ಅಧಿಕಾರಿಗಳು
ಸಂತ್ರಸ್ತೆಯನ್ನು ಕರೆತಂದು ಸ್ಥಳ ಮಹಜರು ಮಾಡಲಿದ್ದಾರೆ.

ಹೊಳೆನರಸೀಪುರದ ಎಚ್.ಡಿ.ರೇವಣ್ಣ ಅವರ ನಿವಾಸದಲ್ಲಿ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂದು ದೂರಿನಲ್ಲಿ ಸಂತ್ರಸ್ತೆ ಆರೋಪಿಸಿದ್ದರು.